ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ ದಿನನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ ದಲಿತರ ಓಣಿಯಲ್ಲಿ ಕಳೆದ 15 ದಿನಗಳಿಂದ ಹನಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಣಿಯಲ್ಲಿ ಸದ್ಯ ಎರಡು ಹ್ಯಾಂಡ್ ಪಂಪ್ ಗಳು, ಮೂರು ಬೋರ್‌ವೆಲ್ ಗಳು ಹಾಗೂ ಒಂದು ಬಾವಿ ಇದ್ದರೂ ಸಹ, ನಿರ್ವಹಣೆಯ ಕೊರತೆಯಿಂದಾಗಿ ದಲಿತ ಸಮುದಾಯಕ್ಕೆ ಮಾತ್ರ ನೀರು ಸಿಗದಂತಾಗಿದೆ.
ಈ ಕುರಿತು ಗ್ರಾಮದ ಪ್ರಮುಖರಾದ ಪ್ರಭಾಕರ್ ಇಂಗಳೇ ಹಾಗೂ ಶಾಶ್ವತಿ ಮಾಳೆಗೆ ಅವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ಅವರು ದೂರಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸದ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಕೂಡಲೇ ಬೆಳಕುಣಿ ಚೌದ್ರಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಸ್ಥಳೀಯ ಶಾಸಕರಾದ ಪ್ರಭು ಚೌವ್ಹಾಣ್ ಅವರು ತಕ್ಷಣವೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಪ್ರಭಾಕರ್ ಇಂಗಳೇ ಮತ್ತು ಶಾಶ್ವತಿ ಮಾಳೆಗೆ ಅವರು ಸರ್ಕಾರದ ಗಮನ ಸೆಳೆದಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
The post ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ appeared first on nammatumakuru.
from nammatumakuru https://ift.tt/6T7a2nG
