ಚಿಕ್ಕಮಗಳೂರು: ಕಾಫಿನಾಡು ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಗಾಳಿ-ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಪ್ರವಾಸಿ ತಾಣ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದರೆ, ಪ್ರಮುಖ ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ಸಂಚಾರ ವ್ಯತ್ಯಯಗೊಂಡಿದೆ. ಮತ್ತೊಂದೆಡೆ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಆತಂಕ ಮನೆಮಾಡಿದೆ.
ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತ:
ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ನಿರಂತರ ಮಳೆಯಿಂದಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಇದರಿಂದಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಬೃಹತ್ ಪ್ರಮಾಣದ ಗುಡ್ಡ ಕುಸಿದಿದೆ. ಅತ್ತಿಗುಂಡಿ ಮತ್ತು ಮಹಲ್ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬಿದ್ದಿದ್ದ ಮಣ್ಣನ್ನು ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದು, ಪ್ರಸ್ತುತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಮಳೆ ಹೀಗೆಯೇ ಮುಂದುವರಿದರೆ ಮತ್ತಷ್ಟು ಭೂಕುಸಿತವಾಗುವ ಭೀತಿ ಇರುವ ಕಾರಣ ಸ್ಥಳೀಯರು ಹಾಗೂ ಪ್ರವಾಸಿಗರು ಜಾಗರೂಕತೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಶಂಕರ್ ಫಾಲ್ಸ್ ಬಳಿ ಬೃಹತ್ ಮರ ಧರೆಗೆ:

ಚಿಕ್ಕಮಗಳೂರು–ಶೃಂಗೇರಿ ರಾಜ್ಯ ಹೆದ್ದಾರಿಯ ಶಂಕರ್ ಫಾಲ್ಸ್ ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರ ರಸ್ತೆಗೆ ಉರುಳಿಬಿದ್ದಿದೆ. ಘಟನೆಯಿಂದಾಗಿ ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ಗಂಟೆಗೂ ಹೆಚ್ಚು ಕಾಲ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಸುರಿಯುವ ಮಳೆಯ ಮಧ್ಯೆಯೂ ಶ್ರಮಿಸಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಹಾದಿ ಮಾಡಿಕೊಟ್ಟಿದ್ದಾರೆ.
ಅಪಾಯದ ಮಟ್ಟ ಮೀರಿದ ತುಂಗಾ ನದಿ:

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ನಿನ್ನೆಯಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಅಬ್ಬರಿಸಿಕೊಂಡು ಹರಿಯುತ್ತಿದ್ದು, ನದಿ ದಂಡೆಯಲ್ಲಿದ್ದ ಪ್ರಸಿದ್ಧ ಕಪ್ಪೆಶಂಕರನಾರಾಯಣ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ತೀರಪ್ರದೇಶದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
The post ಕಾಫಿನಾಡಿನಲ್ಲಿ ಮುಂದುವರಿದ ಭಾರಿ ಮಳೆ: ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ, ತುಂಗಾ ನದಿ ಅಪಾಯದ ಮಟ್ಟ ಮೀರಿ ಪ್ರವಾಹ! appeared first on Mahanayaka.
from Mahanayaka https://ift.tt/YVxkF3u
